ವರ್ಷದ 365 ದಿನವು ಜೋಗ್ ಮೈದುಂಬಿ ಹರಿಯಲು ಲಿಂಗನಮಕ್ಕಿ ಜಲಾಶಯದಿಂದ 200 ಕ್ಯೂಸೆಕ್ಸ್ ನೀರು ಬಿಡುಗಡೆ
1 min readಶಿವಮೊಗ್ಗ: ವಿಶ್ವವಿಖ್ಯಾತ ಜೋಗ್ ಜಲಪಾತದಲ್ಲಿ ರೂ.185.00ಕೋಟಿ ವೆಚ್ಚದಲ್ಲಿ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲು ಟೆಂಡರ್ ಅಂತಿಮವಾಗಿದ್ದು, ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಸಿ.ಪಿ. ಯೋಗೇಶ್ವರ ಪ್ರಕಟಿಸಿದ್ದಾರೆ.
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸಂಸ್ಥೆಯಿಂದ ಈ ಬೃಹತ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೇರಳ ಹಾಗೂ ಗೋವಾ ರಾಜ್ಯಗಳಿಂದ ಜೋಗ ಜಲಪಾತಕ್ಕೆ 35 ಕಿ.ಮೀ. ಉದ್ದದ ಜಲಮಾರ್ಗದಲ್ಲಿ ಪ್ರವಾಸಿಗರು ಆಗಮಿಸಲು ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿದೆ.
ಸರ್ಕಾರಿ ರಜಾ ದಿನಗಳಂದು ಲಿಂಗನಮಕ್ಕಿ ಜಲಾಶಯದಿಂದ ಪ್ರಥಮ ಹಂತವಾಗಿ 200 ಕ್ಯೂಸೆಕ್ಸ್ ನೀರನ್ನು ಹರಿಸಿ ಜೋಗದ ಸೊಬಗನ್ನು ಪ್ರವಾಸಿಗರಿಗೆ ಉಣಿಸಲಾಗುವುದು. ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣವನ್ನು 300 ಕ್ಯೂಸೆಕ್ಸ್ ಗೆ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಸಾವಿರ ಪ್ರವಾಸಿಗರು ವಾಸ್ತವ್ಯ ಮಾಡಲು 2 ಹೋಟೆಲ್ ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯದ ಪ್ರತಿಷ್ಠಿತ ಯೋಜನೆಯಾಗಿರುವ ಹೆಲಿ ಟೂರಿಸಂ ಸರ್ಕೀಟ್ ಗೆ ಜೋಗಜಲಪಾತವನ್ನು ಸೇರ್ಪಡೆ ಮಾಡಲಾಗಿದೆ. ಒಟ್ಟಾರೆ ವರ್ಷದ 365 ದಿನಗಳು ಜೋಗದ ಸೊಬಗನ್ನು ರಾಜ್ಯ, ಹೊರ ರಾಜ್ಯಗಳು ಹಾಗೂ ದೇಶ ವಿದೇಶಗಳ ಪ್ರವಾಸಿಗರು ಕಣ್ತುಂಬಿಕೊಳ್ಳಬಹುದು.
ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ಹಾಗೂ ವಸತಿ ವಿಹಾರಧಾಮ ಕಚೇರಿಯಲ್ಲಿ ಸಚಿವ ಯೋಗೇಶ್ವರ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಧನ ಇಲಾಖೆಯ ಕಾರ್ಯದರ್ಶಿ ಪೊನ್ನುರಾಜ್, ಪ್ರವಾಸೋದ್ಯಮ ಕಾರ್ಯದರ್ಶಿ ಪಂಕಜ ಕುಮಾರ್ ಪಾಂಡೆ, ಜೆ.ಎಲ್.ಆರ್. ಹಾಗೂ ಕೆ.ಎಸ್.ಟಿ.ಡಿ.ಸಿ. ಎಂ.ಡಿ ಗಳಾದ ಕುಮಾರ್ ಪುಷ್ಕರ್ ಹಾಗೂ ವಿಜಯ ಶರ್ಮ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಂಧು ರೂಪೇಶ್ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ರಾಜಕೀಯ ಸುದ್ದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾವೆಲ್ಲ ಪರೀಕ್ಷೆ ಬರೆದಿದ್ದೇವೆ. ಅತೀ ಶೀಘ್ರದಲ್ಲಿ ಫಲಿತಾಂಶ ಪ್ರಕಟಣೆಯಾಗಲಿದೆ ಎಂದು ಪ್ರವಾಸೋದ್ಯಮ ಸಚಿವರಾದ ಯೋಗೇಶ್ವರ ರವರು ಸುದ್ದಿಗಾರರ ಪ್ರಶ್ನೆಗೆ ಮಾರ್ಮಿಕವಾಗಿ ಹೇಳಿದ್ದಾರೆ.
ನನ್ನ ವೈಯಕ್ತಿಕ ಸಮಸ್ಯೆ ಹಾಗೂ ರಾಜ್ಯ ಸರ್ಕಾರ ಮತ್ತು ರಾಜ್ಯ ಬಿ.ಜೆ.ಪಿ. ಯ ಮೂಲಭೂತ ಸಮಸ್ಯೆಗಳ ಬಗ್ಗೆ ಹೈಕಮಂಡ್ ಗೆ ವಿವರಣೆ ನೀಡಿದ್ದೇನೆ. ಸರ್ಕಾರ ಹಾಗೂ ಪಕ್ಷದ ಮೂಲಭೂತ ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಏನೇ ಆಗಲಿ ಪರೀಕ್ಷೆ ಬರೆಯಲಾಗಿದ್ದು, ಅತೀ ಶೀಘ್ರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಖಚಿತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಒಬ್ಬ ಜವಾಬ್ದಾರಿ ಸಚಿವನಾಗಿ ನಾನು ನನ್ನ ಕರ್ತವ್ಯಗಳನ್ನು ನಿಭಾಯಿಸುತ್ತಿದ್ದೇನೆ. ನನ್ನ ವೈಯಕ್ತಿಕ ನೋವುಗಳು ಹಾಗೂ ಸಮಸ್ಯೆಗಳನ್ನು ನಮ್ಮ ದೆಹಲಿ ನಾಯಕರ ಮುಂದೆ ಹೇಳಿದ್ದೇನೆ. ಪಕ್ಷಕ್ಕೆ ದಕ್ಕೆ ಉಂಟಾಗಬಾರದು ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎಂಬ ಹಿನ್ನಲೆಯಲ್ಲಿ, 4 ಗೋಡೆಗಳ ಮಧ್ಯೆ ವಿವರಣೆ ನೀಡಿದ್ದೇನೆ.
ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡಲು ನನಗೆ ತುಂಬಾ ತೊಂದರೆಯಾಗುತ್ತಿದೆ. ಈ ಭಾಗದಲ್ಲಿ ನಮ್ಮ ಬಿ.ಜೆ.ಪಿ. ಪಕ್ಷದ ನಾಯಕರುಗಳು ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಜೊತೆ ಹೊಂದಾಣಿಕೆ ಮಾಡಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್ ಬೇಡ. ಇದಕ್ಕೆ ಕೊನೆಯಾಡಬೇಕು. ಈ ವಿಷಯದಲ್ಲಿ ರಾಜಿ ಪ್ರಶ್ನೆ ಇಲ್ಲ. ಕರ್ನಾಟಕದಲ್ಲಿ ಅತೀ ಉತ್ತಮವಾದ ಸರ್ಕಾರ ಇರಬೇಕು ಪಕ್ಷ ಸಂಘಟನೆ ಸಹ ರಾಜ್ಯದ ಇತರ ಭಾಗಗಳಂತೆ ಹಳೇ ಮೈಸೂರು ಭಾಗದಲ್ಲೂ ನಡೆಯಬೇಕು.
ನನಗೆ ಕೋಲಾರ ಜಿಲ್ಲೆ ಉಸ್ತುವಾರಿ ನೀಡುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸಧ್ಯಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ರವರು ಇದ್ದಾರೆ. ಈ ನಿಟ್ಟಿನಲ್ಲಿ ನನಗೆ ಕೋಲಾರ ಉಸ್ತುವಾರಿ ನೀಡುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.
ರಮೇಶ್ ಜಾರಕಿಹೊಳಿ ನಾನು ಹಾಗೂ ರಮೇಶ್ ಜಾರಕಿಹೊಳಿ 20 ವರ್ಷದ ಸ್ನೇಹಿತರು. ಅವರ ಇತ್ತೀಚಿನ ರಾಜಕೀಯ ನಿಲುವಿನ ಬಗ್ಗೆ ನಾನು ಚರ್ಚಿಸಿಲ್ಲ. ಭೇಟಿ ಸಹ ಮಾಡಿಲ್ಲ. ರಮೇಶ್ ಜಾರಕಿಹೊಳಿ ರವರು ಮುಂಬೈ ಗೆ ಹೋಗಿ ರಾಜೀನಾಮೆ ನೀಡುವ ಬಗ್ಗೆಯೂ ನನಗೆ ಮಾಹಿತಿ ಇಲ್ಲ. ಅವರ ಪ್ರಚಲಿತ ರಾಜಕೀಯ ನಿರ್ಣಯದ ಬಗ್ಗೆ ಗೊತ್ತಿಲ್ಲ. ರಮೇಶ್ ಜಾರಕಿಹೊಳೆ ರವರು ರಾಜೀನಾಮೆ ಕೊಡುವುದಿಲ್ಲ ಎಂದು ಇದೇ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.