ಸ್ಮಾರಕ ವಿಚಾರ : ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಸುಮಲತಾ!

1 min read

ಮಂಡ್ಯದ ಗಂಡು ನಮ್ಮ ನಿಮ್ಮೆಲ್ಲರ ಅಚ್ಚುಮೆಚ್ಚಿನ ಕನ್ವರ್ ಲಾಲ್ ಅಂಬರೀಶ್ ಅವರು ಬಾರದ ಲೋಕಕ್ಕೆ ತೆರಳಿದ್ದಾರೆ. ಆದರೆ ಪ್ರೀತಿಯ ಅಂಬಿಯ ನೆನಪು ಅವರ ಚಿತ್ರಗಳು ಅವರ ಮ್ಯಾನರಿಜಮ್ ಇವತ್ತಿಗು ಎಲ್ಲರ ಮನೆ ಮನಗಳಲ್ಲಿ ಹಚ್ಚ ಹಸಿರಾಗಿದೆ. ಆದರೆ ಅಂಬಿ ಅವರಿಗೆ ಸೂಕ್ತ ಸ್ಮಾರಕ ಸೇರಿ ಪ್ರಶಸ್ತಿ ಬಗ್ಗೆ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ಆಗ್ತಿದೆ. ಅಲ್ಲದೆ ಅಂಬಿ ಅಭಿಮಾನಿಗಳು ಕೂಡ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಅಂಬಿ ಸ್ಮಾರಕಕ್ಕಾಗಿ ಅಭಿಯಾನ ಮಾಡುತ್ತಿದ್ದಾರೆ. ಇದರಿಂದ ಬೇಸರಗೊಂಡಿರುವ ನಟಿ, ಸಂಸದೆ ಸುಮಲತಾ ಅಂಬರೀಶ್ ಅವರು ಅಭಿಮಾನಿಗಳಿಗೆ ಭಾವನಾತ್ಮಕವಾದ ಪತ್ರ ಬರೆದಿದ್ದು ಈಗಾಗಲೇ ನಮ್ಮೆಲ್ಲರ ಪ್ರೀತಿಯ ಅಪ್ಪು ಕಳೆದುಕೊಂಡ ನೋವಿನಲ್ಲಿ ಈ ಅಭಿಯಾನ ಸದ್ಯಕ್ಕೆ ಬೇಡ ಎಂದು ಮನವಿ ಮಾಡಿದ್ದಾರೆ.

ಅಷ್ಟಕ್ಕು ಸುಮಲತಾ ಅವರು ಬರೆದಿರುವ ಆ ಪತ್ರದ ಸಾರಾಂಶ ಹೇಗಿದೆ ಎಂಬುದನ್ನ‌ ನೋಡೋಣ ಬನ್ನಿ.

ನನ್ನ ಮನವಿ

ನಮ್ಮ ಪ್ರೀತಿಯ ಡಾ|| ಅಂಬರೀಶ್ ಅವರನ್ನು ಆರಾಧ್ಯ ದೈವದಂತೆ ಪ್ರೀತಿಸಿ, ಅವರ ನೆನಪನ್ನು ಚಿರಸ್ಥಾಯಿಯಾಗಿ ಬೆಳಗಿಸುತ್ತಿರುವ ನೆಚ್ಚಿನ ಅಭಿಮಾನಿ ಸಂಘಗಳು ಹಾಗೂ ಇನ್ನಿತರ ಸಂಘಟನೆಗಳು ಇಂದು ಅಂಬರೀಶ್ ಅವರ ಸ್ಮಾರಕ ಅಭಿವೃದ್ಧಿಗೊಳಸುವುದು, ಅವರ ಹೆಸರಿನಲ್ಲಿ ರಸ್ತೆಗಳನ್ನು ನಾಮಕರಣ ಮಾಡುವುದು ಮತ್ತು ಇನ್ನಿತರ ಬೇಡಿಕೆಗಳನ್ನು ಒತ್ತಾಯಿಸಿ ಹೋರಾಟ ಮಾಡುವುದಾಗಿ ಹೇಳಿರುವುದು ಸಾಮಾಜಿಕ ಜಾಲತಾಣಗಳ ಮೂಲಕ ನನ್ನ ಗಮನಕ್ಕೆ ಬಂದಿದೆ.

ನಮ್ಮ ಕುಟುಂಬದೊಂದ್ಧಗೆ ಅತಿ ಹೆಚ್ಚು ಒಡನಾಟ ಹೊಂದಿದ್ದ ಹಾಗೂ ನಮ್ಮ ಮನೆ ಮಗನಂತಿದ್ದ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡಿರುವ ಆಘಾತಕಾರಿ ಘಟನೆಯಿಂದ ನನಗಾಗಿರುವ ನೋವನ್ನು ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ.

ಇದರೊಂದಿಗೆ ಚಿತ್ರರಂಗ, ಅಭಿಮಾನಿಗಳು, ಹಾಗೂ ಕರ್ನಾಟಕ ರಾಜ್ಯದ ಜನತೆಗೆ ತುಂಬಲಾರದಂತ ನಷ್ಟ ಉಂಟಾಗಿದ್ದು, ಈ ಸಮಯದಲ್ಲಿ ತಾವುಗಳು ಹೋರಾಟ ಮಾಡುವ ನಿರ್ಧಾರ ಮಾಡಿರುವುದು ಎಲ್ಲರ ಹೃದಯದ ಮೇಲೆ ಆಗಿರುವ ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ. ಆದುದರಿಂದ, ಈ ಸಮಯದಲ್ಲಿ ಈ ವಿಷಯ ಪ್ರಸ್ತಾಪಿಸುವುದು ಸಮಂಜಸವಲ್ಲ.

ನಿಮ್ಮ ಭಾವನೆಗಳನ್ನು ನಾನು ಗೌರವಿಸುತ್ತೇನೆ, ಆದರೆ ಪ್ರಸ್ತುತ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದರಿಂದ ಅಂಬರೀಷ್ ಅವರ ಘನತೆ ಹಾಗೂ ಗೌರವಕ್ಕೆ ಧಕ್ಕೆಯಾಗುತ್ತದೆ. ಯಾವುದೇ ಪ್ರಶಸ್ತಿಯಾದರು ಕೇಳಿ ಪಡೆಯುವುದು ಸರಿಯಲ್ಲ.

ಎಲ್ಲಾ ಪ್ರಶಸ್ತಿಗಳನ್ನು ಮೀರಿದಂತ ಪ್ರೀತಿ ಮತ್ತು ಅಭಿಮಾನವನ್ನು ನೀವುಗಳು ನಮ್ಮ ಕುಟುಂಬಕ್ಕೆ ನೀಡಿದ್ದೀರಿ. ಅಂಬರೀಷ್ ಅವರು ತಮ್ಮ ಜೀವನದಲ್ಲಿ ಯಾವ ಪ್ರಶಸ್ತಿ, ಹುದ್ದೆ ಅಥವಾ ಸನ್ಮಾನವನ್ನು ಬಯಸಿದವರಲ್ಲ. ಹೀಗಾಗಿ ಅಂಬರೀಷ್ ಅವರ ಅಭಿಮಾನಿಗಳಾಗಿ ತಾವುಗಳು ಸಹ ಅವರ ಹಾದಿಯಲ್ಲಿ ನಡೆಯಬೇಕು ಎನ್ನುವುದು ನನ್ನ ಆಶಯ. ಆದುದರಿಂದ, ಈ ಸಮಯದಲ್ಲಿ ಪ್ರಶಸ್ತಿ ಕೋರಿ ಹೋರಾಟ ಅಥವಾ ಪ್ರತಿಭಟನೆ ನಡೆಸುವುದು ಅಂಬರೀಷ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ವಿಷಯವಾಗಿದೆ.

ಆದುದರಿಂದ, ತಮ್ಮೆಲ್ಲರ ಅಭಿಮಾನ ಮತ್ತು ಪ್ರೀತಿ-ವಾತ್ಸಲ್ಯಗಳನ್ನು ಗೌರವಿಸುತ್ತ, ಹಾಗೂ ನಿಮ್ಮೆಲ್ಲರ ಆಸೆಯನ್ನು ಮುಂದಿನ ದಿನಗಳಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಈಡೇರಿಸುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳ ಮೇಲೆ ಭರವಸೆಯನ್ನು ಇಡುತ್ತಾ, ತಾವು ತೆಗೆದುಕೊಂಡಿರುವ ಈ ಹೋರಾಟದ ನಿರ್ಧಾರವನ್ನು ಹಿಂಪಡೆದು ನವೆಂಬರ್ 24ನೇ ತಾರೀಕಿನಂದು ಅಂಬರೀಷ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯನ್ನು ಶಾಂತಿಯುತವಾಗಿ ನೆರವೇರಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರೋಣ ಎಂದು ತಮ್ಮಲ್ಲಿ ಕಳಕಳಿಯಿಂದ ಪ್ರಾರ್ಥಿಸುತ್ತೇನೆ.

ವಂದನೆಗಳೊಂದಿಗೆ
ತಮ್ಮ ವಿಶ್ವಾಸಿ

(ಸುಮಲತಾ ಅಂಬರೀಷ್)

About Author

Leave a Reply

Your email address will not be published. Required fields are marked *