ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಡಾ.ಕೆ.ಸುಧಾಕರ್
1 min readಬೆಂಗಳೂರು,ಜ.14-ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಉತ್ತುಂಗಕ್ಕೇರಿಲ್ಲ. ಹೀಗಾಗಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ ವಿನಃ ಮತ್ತೆ ಲಾಕ್ ಡೌನ್ ಮಾಡೋಣ ಮಾಡುವುದಿಲ್ಲ ಎಂದಿದ್ದಾರೆ.
ಈಗಾಗಲೇ ಎರಡು ಬಾರಿ ಲಾಕ್ ಡೌನ್ ನಿಂದ ಸಾಕಷ್ಟು ಆರ್ಥಿಕ ಸಮಸ್ಯೆಯಾಗಿದೆ. ಅಲ್ಲದೆ, ಲಾಕ್ ಡೌನ್ ನಿಂದಾಗಿ ಜನರು ಅನುಭವಿಸಿರುವ ಸಂಕಷ್ಟದ ಬಗ್ಗೆ ಸರ್ಕಾರಕ್ಕೆ ತಿಳಿದಿದೆ. ಹೀಗಾಗಿ ಲಾಕ್ ಡೌನ್ ಉದ್ದೇಶ ಸರಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.
ಇನ್ನು ಫೆಬ್ರವರಿ ಮೊದಲ ವಾರದಲ್ಲಿ ಕೊರೊನಾ ಗರಿಷ್ಠ ಮಟ್ಟ ತಲುಪಲಿದ್ದು, ಮೂರು ಮತ್ತು ನಾಲ್ಕನೇ ವಾರದಲ್ಲಿ ಮತ್ತೆ ಸುಧಾರಿಸಿಕೊಳ್ಳಲಿದೆ. ಫೆಬ್ರವರಿ ಅಂತ್ಯದ ವೇಳೆಗೆ ಕೋವಿಡ್ ಸಂಖ್ಯೆ ಇಳಿಮುಖ ಆಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಆತಂಕಕಾರಿ ಮತ್ತು ಜನರಿಗೆ ಸಮಸ್ಯೆ ಉಂಟು ಮಾಡುವ ನಿಯಮ ಜಾರಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೊರೋನಾ ಮೂರನೇ ಅಲೆ ಹಾಗೂ ಓಮಿಕ್ರನ್ ಕುರಿತು ನಿರ್ಲಕ್ಷ್ಯ ವಹಿಸದೆ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪದೇ ಮಾಸ್ಕ್ ಧರಿಸಬೇಕು. ಜೊತೆಗೆ ಜನರು ಒಂದೂವರೆ ತಿಂಗಳ ಕಾಲ ಅತ್ಯಂತ ಎಚ್ಚರಿಕೆಯಲ್ಲಿ ಇರಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಧಾನಿ ಮೋದಿ ಜತೆ ನಡೆದ ಮುಖ್ಯ ಮಂತ್ರಿಗಳ ಸಭೆಯಲ್ಲಿ ಕೂಡ ಜನರಿಗೆ ಈ ಬಗ್ಗೆ ಜಾಗೃತಿ ಮೂಡಿಸುವಂತೆ ಸೂಚಿಸಿದ್ದಾರೆ. ಜನರಿಗೆ ಆರ್ಥಿಕ ನಷ್ಟವಾಗದಂತೆ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಲಾಕ್ ಡೌನ್ ನಿಂದ ಸೋಂಕು ನಿಯಂತ್ರಣವಾಗುವುದಿಲ್ಲ. ಎರಡು ಬಾರಿಯ ಲಾಕ್ ಡೌನ್ ಈಗಾಗಲೇ ಜನರಿಗೆ ಸಮಸ್ಯೆ ಆಗಿದೆ. ಹಾಗಾಗಿ ಲಾಕ್ ಡೌನ್ ಇಲ್ಲದೆ ಇತರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಆದರೆ ಶೇ.5-6 ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ವೀಕೆಂಡ್ ಕರ್ಫ್ಯೂ ಜಾರಿಯಾಗಿ ಎರಡು ವಾರ ಮಾತ್ರವಾಗಿದ್ದು, ಕೊರೋನಾ ನಿಯಂತ್ರಿಸಲು ಕನಿಷ್ಠ 15 ದಿನ ಬೇಕು ಎಂದಿದ್ದಾರೆ.