ಇಎಸ್‌ಐ ನೇಮಕಾತಿಯಲ್ಲಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ

1 min read

ನವದೆಹಲಿ,ಜ.21-ಕಾರ್ಮಿಕ ರಾಜ್ಯ ವಿಮಾ ನಿಗಮ(ESI)ದ ನೇಮಕಾತಿಯಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದೆ.
ಕಾರ್ಮಿಕ ರಾಜ್ಯ ವಿಮಾ ನಿಗಮ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ಕನ್ನಡವನ್ನು ನಿರ್ಲಕ್ಷಿಸಿರುವ ಧೋರಣೆ ವಿರುದ್ಧ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಹೊಸ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿರುವುದು ಸಂತಸದ ಸಂಗತಿ.
ಇದರಿಂದ ಎಂಟಿಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಯಲ್ಲಿ ಭಾಷಾ ಮಾಧ್ಯಮದಲ್ಲಿ ಬದಲಾವಣೆ ಮಾಡಿ ಆಯಾ ವಲಯಗಳಲ್ಲಿ ಹಿಂದಿ ಜೊತೆಗೆ ಇತರ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ನೀಡಲಾಗಿದೆ.
ಕನ್ನಡಿಗರ ಆಕ್ರೋಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಜೊತೆ ಚರ್ಚಿಸಿ ಕೆಳಹಂತದ ಹುದ್ದೆಗಳಿಗೆ ಕರ್ನಾಟಕದಲ್ಲಿ ಹಿಂದಿ ಜತೆಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶವಾಗುವಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಬೇಕು ಎಂದು ವಿನಂತಿಸಿದ್ದರು.
ಕಾರ್ಮಿಕರ ರಾಜ್ಯ ವಿಮಾ ನಿಗಮವು ಕಳೆದ ಡಿ. 27ರಂದು ಅಪ್ಪರ್ ಡಿವಿಷನ್ ಕ್ಲರ್ಕ್ ಸ್ಟೆನೋಗ್ರಾಫರ್ ಹಾಗೂ ಮಲ್ಟಿ ಟಾಸ್ಕ್ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಪ್ರಕಟಿಸಿತ್ತು. ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ವತಂತ್ರರಾಗಿದ್ದಾರೆ.
ಈ ವಿಷಯವಾಗಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರಾಜ್ಯ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಸಹ ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಕೇಂದ್ರ ರೂಪಿಸಿರುವ ನೇಮಕಾತಿ ನಿಯಮದಲ್ಲಿ ಬದಲಾವಣೆ ತರಲು ಪ್ರಯತ್ನಿಸುವಂತೆ ಕೋರಿದ್ದರು. ಕನ್ನಡಿಗರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದರು.
ಅದರಂತೆ ಪರೀಕ್ಷೆ ಎದುರಿಸಲು ಅನುಕೂಲವಾಗುವಂತೆ ಕನ್ನಡವನ್ನು ಪರಿಗಣಿಸುವಂತೆ ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾಧವ್‌ ಅವರೊಂದಿಗೆ ಚರ್ಚಿಸಿದ್ದೆ ಎಂದಿರುವ ಪ್ರಹ್ಲಾದ ಜೋಶಿ ಅವರು, ಇದಕ್ಕೆ ಸಚಿವ ಯಾಧವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಆಗಿರುವ ಅನ್ಯಾಯವನ್ನು ಸರಿಪಡಿಸುವ ಭರವಸೆ ನೀಡಿದ್ದರು.
ಅವರು ಕೊಟ್ಟ ಭರವಸೆಯಂತೆ ಅನ್ಯಾಯವನ್ನು ಸರಿಪಡಿಸಿದ್ದಾರೆ ಎಂದು ಭೂಪೇಂದ್ರ ಯಾದವ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ನಿಗಮವು ಹೊರಡಿಸಿರುವ ತಿದ್ದುಪಡಿ ಅಧಿಸೂಚನೆಯಿಂದ ಕನ್ನಡಿಗರಿಗಾದ ಅನ್ಯಾಯವನ್ನು ಸರಿಪಡಿಸಿದಂತಾಗಿದೆಯೆಂದು ಸಚಿವ ಜೋಶಿ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *