ಅರ್ಧಕ್ಕೆ ನಿಂತಿದ್ದ ಕನ್ನಡ ಬಿಗ್ ಬಾಸ್ ಮತ್ತೇ ಶುರು!
1 min readಬಿಗ್ ಬಾಸ್ ಸೀಸನ್ 8 ಮತ್ತೇ ಶುರುವಾಗ್ತಿದೆ. ಈ ಬಗ್ಗೆ ಖುದ್ದು ಕಲರ್ಸ್ ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಡ್ಕಲ್ ಖುದ್ದು ತಮ್ಮ ಫೇಸ್ಬುಕ್ ಖಾತೆಯಲ್ಲಿ ಇದನ್ನ ಖಚಿತಪಡಿಸಿದ್ದು, ಎರಡನೇ ಇನಿಂಗ್ಸ್ ಶುರುವಾಗ್ತಿದೆ ಎಂದು ಬರೆದು ಕೊಂಡಿದ್ದಾರೆ. ಇದಕ್ಕು ಮುನ್ನ ನಡೆದ ಕನ್ನಡದ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಅರ್ಧಕ್ಕೆ ಮೊಟಕುಗೊಳಿಸುವ ಹಂತ ತಲುಪಿತ್ತು. ಇದೀಗಾ ಮತ್ತೇ ಇದನ್ನ ರೀಸ್ಟಾರ್ಟ್ ಮಾಡಲು ಮುಂದಾಗಿದ್ದಾರೆ. ಅಲ್ಲದೆ ಇದೀಗಾ ರಾಜ್ಯದಲ್ಲಿ ಕರೋನಾ ಪ್ರಮಾಣ ಕೂಡ ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿ ಷರತ್ತು ಬದ್ಧ ಅನ್‌ಲಾಕ್ ಮಾಡಲಾಗಿದೆ. ಇದರಿಂದ ಮತ್ತೇ ಬಿಗ್ ಬಾಸ್ ಶುರುವಾಗಲಿದ್ದು, 12 ಆಟಗಾರರು ಹೇಗೆ ಕಮಾಲ್ ಮಾಡ್ತಾರೆಂದು ಕಾದುನೋಡಬೇಕಿದೆ.
ಪರಮೇಶ್ವರ ಗುಂಡ್ಕಲ್ ಮಾತು-
ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.
ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು.. ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.
ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ-