ಬಿಎಸ್ವೈ ರಾಜೀನಾಮೆ ಮುಖ್ಯವಲ್ಲ- ಬಿಜೆಪಿ ತೊಲಗಬೇಕು’ ಆಗ ರಾಜ್ಯಕ್ಕೆ ನೆಮ್ಮದಿ!

1 min read

ಬಿಎಸ್ ವೈ ರಾಜೀನಾಮೆ ಮುಖ್ಯವಲ್ಲ, ಬಿಜೆಪಿ ತೊಲಗಿದಾಗಲೇ ರಾಜ್ಯಕ್ಕೆ ನೆಮ್ಮದಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬಾದಾಮಿ ವಿಧಾನಸಭೆ ಕ್ಷೇತ್ರದ ಪ್ರವಾಹ ಪೀಡಿತ ಗ್ರಾಮಗಳಿಗೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದ ಬಳಿಕ ಮಾತನಾಡಿದ ಅವರು ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ನಿರೀಕ್ಷಿತವಾದುದು. ಬಹಳ ಹಿಂದೆಯೇ ನಾನು ಹೇಳಿರುವುದು ಈಗ ನಿಜವಾಗಿದೆ. ಅವರ ರಾಜೀನಾಮೆಯ ಬಗ್ಗೆ ಸಂಭ್ರಮಿಸುವಂತಹದ್ದೇನೂ ಇಲ್ಲ. ಸೈದ್ಧಾಂತಿಕವಾಗಿ, ಆಡಳಿತಾತ್ಮಕವಾಗಿ ಮತ್ತು ನೈತಿಕವಾಗಿ ಭ್ರಷ್ಟವಾಗಿರುವ ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಿದಾಗಲೇ ನಾವು ಸಂಭ್ರಮಿಸುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯಡಿಯೂರಪ್ಪನವರ ಬಗ್ಗೆ ನನಗೆ ಅನುಕಂಪವಿದೆ, ಅವರ ಮುಂದಿನ ಜೀವನ ಸುಖಕರವಾಗಿರಲಿ ಎಂದಷ್ಟೇ ನಾನು ಆಶಿಸುತ್ತೇನೆ.

ಚುನಾವಣೆಯಲ್ಲಿ ಸೋತಾಗ ಮುಖ್ಯಮಂತ್ರಿ ರಾಜೀನಾಮೆ ಕೊಡಲೇಬೇಕಾಗುತ್ತದೆ, ಅದು ಪ್ರಜಾಪ್ರಭುತ್ವದ ರೂಢಿ. ಆದರೆ ಶಾಸನ ಸಭೆಯಲ್ಲಿ ಬಹುಮತ ಹೊಂದಿದ್ದ ಪಕ್ಷದ ಮುಖ್ಯಮಂತ್ರಿ ರಾಜೀನಾಮೆ ನೀಡಿದಾಗ, ಅದಕ್ಕೆ ಕಾರಣವನ್ನು ನೀಡಬೇಕಾಗುತ್ತದೆ.

ಯಡಿಯೂರಪ್ಪನವರ ರಾಜೀನಾಮೆಗೆ ಕಾರಣ ಅವರ ವಯಸ್ಸೇ ಇಲ್ಲವೇ ಸರ್ಕಾರದ ಭ್ರಷ್ಟಾಚಾರವೇ? ಎನ್ನವುದನ್ನು ಪಕ್ಷ ಸ್ಪಷ್ಟಪಡಿಸಬೇಕಾಗುತ್ತದೆ.

ಬಿಜೆಪಿ ಎನ್ನುವುದು ಭ್ರಷ್ಟಾಚಾರ ಜಾರಿ ಪಾರ್ಟಿ. ಯಡಿಯೂರಪ್ಪನವರ ಭ್ರಷ್ಟಾಚಾರದ ಬಗ್ಗೆ ಅವರ ಪಕ್ಷದ ಶಾಸಕರೇ ಬಾಯ್ತುಂಬ ಮಾತನಾಡಿದ್ದಾರೆ.

‘ನಾ ಖಾವುಂಗಾ, ನಾ ಖಾನೆ ದೂಂಗಾ’ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿಯವರಿಗೆ ಒಂದಿಷ್ಟು ಮಾನ-ಮರ್ಯಾದೆ ಇದ್ದರೆ, ಯಡಿಯೂರಪ್ಪನವರ ಮೇಲಿನ ಭ್ರಷ್ಟಾಚಾರದ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಿ.

ಯಡಿಯೂರಪ್ಪನವರು ಹೋದರೂ, ಇನ್ನೊಬ್ಬರು ಬಂದರೂ ಅದರ ಭ್ಟಷ್ಟತೆಯ ಆತ್ಮ ಬದಲಾಗುವುದಿಲ್ಲ. ದುಡ್ಡಿನ ಬಲದಿಂದ ನಡೆಸಿದ್ದ ಆಪರೇಷನ್ ಕಮಲ ಎಂಬ ಅನೈತಿಕ ಹಾದಿಯಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ತೊಲಗಿದಾಗಲೇ ಕರ್ನಾಟಕದ ಜನತೆಗೆ ನೆಮ್ಮದಿ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *