ನಾಳೆ ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರ: ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
1 min readಮೈಸೂರು: ನಾಳೆ ಆಷಾಢ ಮಾಸದ ಪ್ರಯುಕ್ತ ಮೈಸೂರಿನ ಚಾಮುಂಡಿ ಬೆಟ್ಡದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ದತೆ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಸಕಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಕಾರ್ಯ ಪ್ರವೃತ್ತರಾಗಿದ್ದು, ಇಂದು ಸಿದ್ದತಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ಭೇಟಿ ಪರಿಶೀಲನೆ ನಡೆಸಿದರು.
ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ಕುಡಿಯುವ ನೀರು, ಶೌಚಾಲಯ, ಸರದಿ ಸಾಲಿನಲ್ಲಿ ಹೋಗಲು ಬ್ಯಾರಿಕೇಡ್ ನಿರ್ಮಾಣದ ಸಿದ್ದತಾ ಸ್ಥಳ ಪರಿಶೀಲಿಸಿದರು. ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಬೇಕು. ಈ ಸಂಬಂಧ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ನಾಳೆ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಭಕ್ತರು ಶಾಂತಿಯುತವಾಗಿ ಬಂದು ದರ್ಶನ ಪಡೆಯಲು ಮನವಿ ಮಾಡಿಕೊಳ್ಳುತ್ತೇನೆ ಎಂದು ಜಿಲ್ಲಾಧಿಕಾರಿ ಡಾ ಕೆ. ವಿ ರಾಜೇಂದ್ರ ಹೇಳಿದರು.
ಈ ಸಂದರ್ಭದಲ್ಲಿ ಪೋಲಿಸ್ ಆಯುಕ್ತರಾದ ಬಿ ರಮೇಶ್, ಡಿಸಿಪಿ ಮುತ್ತುರಾಜ್, ಜಾಹ್ನವಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.