ಮಹಿಷ ದಸರಾ ಆಚರಣೆ ಸಂಬಂಧ ಕಾನೂನು ಚೌಕಟ್ಟಿನಲ್ಲಿ ತೀರ್ಮಾನ: ಡಿಸಿ ಡಾ.ಬಗಾದಿ ಗೌತಮ್
1 min readಮೈಸೂರು,ಸೆ.21-ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಕಾನೂನು ಚೌಕಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ದಸರಾ ಆಚರಣಾ ಸಮಿತಿಯ ಎರಡೂ ಕಡೆಯವರು ಪರ ವಿರೋಧ ಅಭಿಪ್ರಾಯ ವ್ಯಕ್ತಪಡಿಸಿ ಮನವಿ ಮಾಡಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಯ ಅಭಿಪ್ರಾಯ ಪಡೆದು ಕಾನೂನು ಚೌಕಟ್ಟಿನಲ್ಲಿ ನಿರ್ಣಯ ಕೈಗೊಂಡು ಪರ- ವಿರೋಧದ ಎರಡೂ ಕಡೆಯವರಿಗೆ ಜಿಲ್ಲಾಡಳಿತದ ತೀರ್ಮಾನ ತಿಳಿಸಲಾಗುವುದು ಎಂದರು.
ಅರಮನೆಯೊಳಗೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ತಾಲೀಮು ಅಷ್ಟು ಒಳ್ಳೆಯದಲ್ಲ ಎನ್ನುವುದಾದರೆ ಅರಣ್ಯ ಇಲಾಖೆ ಜಿಲ್ಲಾಡಳಿತದ ಗಮನಕ್ಕೆ ತಂದರೆ ನಾವು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಗಮನಕ್ಕೆ ತಂದು ದಸರಾ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ಎಲ್ಲಾ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಹೈಪವರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಅರಮನೆಯೊಳಗೆ ಮಾತ್ರ ತಾಲೀಮಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.
ದಸರಾ ಉದ್ಘಾಟನೆ ಸಂಬಂಧ ಜಿಲ್ಲಾಡಳಿತದ ವತಿಯಿಂದ ಯಾರಾದರ ಹೆಸರನ್ನು ನೀಡಲಾಗಿದೆಯೇ ಎಂಬ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ನಮಗೆ ಗೊತ್ತಿಲ್ಲ. ಇದು ಮುಖ್ಯಮಂತ್ರಿಗೆ ಬಿಟ್ಟಿದ್ದು ಎಂದು ಹೇಳಿದರು.