ಮೈಸೂರು ದಸರಾ ಮಹೋತ್ಸವ: ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಕೆ
1 min readಮೈಸೂರು: ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಾರಂಭವಾಗಲಿದ್ದು, ಆಕರ್ಷಕ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗಳು ಮೈಸೂರು ಅಂಬಾವಿಲಾಸ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದು, ಭಾರ ಹೊರುವ ತಾಲೀಮಿನಲ್ಲಿ ಪಾಲ್ಗೊಂಡಿವೆ. ಏತನ್ಮಧ್ಯೆ ಆನೆಗಳು, ಕುದುರೆಗಳ ಸಮ್ಮುಖದಲ್ಲಿ ಫಿರಂಗಿ ಸಿಡಿಸಿ ತಾಲೀಮು ನಡೆಸುವ ಪ್ರಕ್ರಿಯೆಗೆ ಚಾಲನೆ ನೀಡುವ ಸಲುವಾಗಿ ಫಿರಂಗಿ ಗಾಡಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಅವರು ಪೂಜೆ ಸಲ್ಲಿಸಿದರು.
ದಸರಾ ಅಂಗವಾಗಿ ಕುಶಾಲ ತೋಪು ಸಿಡಿಸಲು ತಾಲೀಮು ನಡೆಸಲು ಫಿರಂಗಿಗಾಡಿಗಳಿಗೆ ಸಂಪ್ರದಾಯದಂತೆ ಅರಮನೆ ಆವರಣದಲ್ಲಿ ಇಂದು ಮಧ್ಯಾಹ್ನ ಸಚಿವ ಎಸ್.ಟಿ.ಸೋಮಶೇಖರ್ ಅವರು ಕುಂಬಳಕಾಯಿ ಒಡೆಯುವ ಮೂಲಕ ಪೂಜೆ ಸಲ್ಲಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಡಿಸಿಪಿ ಗೀತಾ ಪ್ರಸನ್ನ ಎಂ.ಎಸ್ ಮತ್ತಿತರರು ಉಪಸ್ಥಿತರಿದ್ದರು.
ಇದೀಗ ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸರು ತಾಲೀಮು ನಡೆಸಲು ಚಾಲನೆ ಲಭಿಸಿದಂತಾಗಿದೆ. 11ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಕೆಯಾಗಿದ್ದು ಸೆಪ್ಟೆಂಬರ್ ಮೊದಲ ವಾರದಲ್ಲಿ ಆನೆಗಳು, ಕುದುರೆಗಳ ಸಮ್ಮುಖದಲ್ಲಿ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲಾಗುತ್ತದೆ.
ವಿಜಯದಶಮಿಯಂದು ಅರಮನೆ ಬಳಿ ಪೊಲೀಸರು 21ಬಾರಿ ಕುಶಾಲತೋಪು ಸಿಡಿಸುವ ಮೂಲಕ ಗೌರವ ಸಲ್ಲಿಸುತ್ತಾರೆ. ಆ ಸದ್ದಿಗೆ ಆನೆಗಳು, ಕುದುರೆಗಳು ಬೆದರದೆ, ವಿಚಲಿತಗೊಳ್ಳದೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿ ಎಂಬ ಉದ್ದೇಶದಿಂದ ದಸರಾ ಆರಂಭಕ್ಕೂ ಮುನ್ನ ಫಿರಂಗಿಗಳ ಮೂಲಕ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲಾಗುತ್ತದೆ.