ಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ
1 min readಬೆಂಗಳೂರು,ಸೆ.22 –ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿರುವುದಾಗಿ ಮಲೆ ಮಹದೇಶ್ಬರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಮಲೆ ಮಹಾದೇಶ್ವರ ದಕ್ಷಿಣ ಕರ್ನಾಟಕದ ಪ್ರಸಿದ್ಧ ಕ್ಷೇತ್ರ. ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ ಪ್ರಾಧಿಕಾರ ಯೋಜನೆ ರೂಪಿಸಿರುವುದನ್ನು ಜಾರಿಗೊಳಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಐದು ವರ್ಷದಲ್ಲಿ ಮಲೆ ಮಹಾದೇಶ್ವರ ಕ್ಷೇತ್ರ ಸಂಪೂರ್ಣ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಲೆ ಮಹಾದೇಶ್ವರ ಬೆಟ್ಟದಲ್ಲಿ 20 ಎಕರೆ ಪ್ರದೇಶದಲ್ಲಿ ನೂರಡಿ ಎತ್ತರದ ಮಾದಪ್ಪನ ಪ್ರತಿಮೆ ನಿರ್ಮಾಣ ಕಾಮಗಾರಿ ಪ್ರಗತಿ ಕುರಿತು ಚರ್ಚಿಸಲಾಯಿತು.
ಇದೇ ವೇಳೆ ನಾಡಿನ ವಿಜಯ ಕರ್ನಾಟಕ ದಿನ ಪತ್ರಿಕೆ ಹೊರ ತಂದಿದ್ದ ಮಾದಪ್ಪನ ಲೀಲೆಗಳನ್ನು ಸಾರುವ ಉಘೆ ಮಾದಪ್ಪ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಲೆ ಮಹಾದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮುಜರಾಯಿ, ವಕ್ಫ್, ಮತ್ತು ಹಜ್ ಸಚಿವರಾದ ಶಶಿಕಲಾ ಜೊಲ್ಲೆ, ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನಿಲ್ ಕುಮಾರ್ ಶಾಸಕರಾದ ಎನ್.ಮಹೇಶ್, ಪುಟ್ಟರಂಗ ಶೆಟ್ಟಿ, ನರೇಂದ್ರ, ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್, ಮಲೆ ಮಹಾದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ಉಪಸ್ಥಿತರಿದ್ದರು.